ಬೆಂಗಳೂರು : ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನಂತರದ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇತೃತ್ವದ ಸಭೆಯ ನಂತರದ ಮಹತ್ವದ ಘೋಷಣೆಯನ್ನು ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಬಿಜೆಪಿ ಶಾಸಕರು ಈ ಸಭೆಯಲ್ಲಿ ಹಾಜರಾಗಿದ್ದರು.
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಹಾವೇರಿ ಜಿಲ್ಲೆಯ ಬಸವರಾಜ್ ಬೊಮ್ಮಾಯಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಅಂತಿಮವಾಗಿ ಘೋಷಿಸಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕುರಿತು ಕಿರು ಪರಿಚಯ ಇಲ್ಲಿದೆ.
ಬಸವರಾಜ್ ಬೊಮ್ಮಾಯಿ 1960ರ ಜನವರಿ 18ರಂದು ಧಾರಾವಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಜನಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಪುತ್ರರಾದ ಇವರು ರಾಜಕೀಯ ಹಿನ್ನೆಲೆ ಹೊಂದಿದ್ದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿದ್ದಾರೆ. ಪತ್ನಿ ಹೆಸರು ಚೆನ್ನಮ್ಮ ಹಾಗೂ ಇಬ್ಬರು ಮಕ್ಕಳಿದ್ದಾರೆ. ಜನತಾದಳದೊಂದಿಗೆ ತಮ್ಮ ರಾಜಕೀಯ ಪ್ರಯಾಣ ಪ್ರಾರಂಭಿಸಿದ ಬಸವರಾಜ್ ಬೊಮ್ಮಾಯಿ ಕರ್ನಾಟಕ ವಿಧಾನಸೌಧಕ್ಕೆ ಎರಡು ಬಾರಿ ಧಾರವಾಡ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.
2008ರಲ್ಲಿ ಅವರು ಪಕ್ಷವನ್ನು ಬದಲಾಯಿಸಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. 2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಗೆಲುವು ಸಾಧಿಸಿದ ಅವರನ್ನು ಜಲಸಂಪನ್ಮೂಲ ಸಚಿವರಾಗಿ ನೇಮಕಗೊಳಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗಿನಿಂದಲೂ ಅವರು ಸಹಕಾರ ಸಚಿವ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮತ್ತು ಗೃಹ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ರಾಜಕೀಯ ಕಾಲಾನುಕ್ರಮ:
- 1998 – ಬಸವರಾಜ್ ಬೊಮ್ಮಾಯಿ ಧಾರವಾಡ ಕ್ಷೇತ್ರದ ಜನತಾದಳದ ಶಾಸಕರಾಗಿ ಆಯ್ಕೆಯಾಗಿದ್ದರು
- 2004 – ಅವರು ಮತ್ತೊಮ್ಮೆ ಧಾರವಾಡ ಕ್ಷೇತ್ರದ ಜನತಾದಳದ ಶಾಸಕರಾಗಿ ಗೆಲುವು ಸಾಧಿಸಿದರು.
- 2008 – ಜನತಾ ದಳವನ್ನು ತೊರೆದು ಬಿಜೆಪಿ ಅಭ್ಯರ್ಥಿಯಾಗಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು, ಅಂದು ಅವರನ್ನು ಜಲಸಂಪನ್ಮೂಲ ಸಚಿವರಾಗಿ ನೇಮಿಸಲಾಯಿತು.
- 2018 – ಕರ್ನಾಟಕ ವಿಧಾನಸಭೆಗೆ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು.
- 2019 – ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅವರನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಯಿತು. ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಅಲ್ಲದೇ ಕರ್ನಾಟಕ ಸರ್ಕಾರದಲ್ಲಿ ಗೃಹ ವ್ಯವಹಾರಗಳ ಸಚಿವರಾಗಿಯೂ ಸೇವೆ ಸಲ್ಲಿಸಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
