ಬೆಂಗಳೂರು,ಅ.1-ವಿಧಾನಪರಿಷತ್‍ನ ಎರಡು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಇಂದು ಅಸೂಚನೆ ಹೊರಬಿದ್ದಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ವಿಧಾನಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ.
ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಅ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ.
ಅ.28ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆದು, ನವೆಂಬರ್ 2ರಂದು ಮತ ಎಣಿಕೆಯಾಗಲಿದೆ. ನ.5ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಕೊರೊನಾ ಸಂಕಷ್ಟದ ನಡುವೆಯೂ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
