ಸಾಗರ: ಸಿಗಂದೂರು ಚೌಡೇಶ್ವರಿ ದೇವಾಲಯ ಧರ್ಮದರ್ಶಿ ರಾಮಪ್ಪ ಅವರ ನೇತೃತ್ವದ ಆಡಳಿತ ಮಂಡಳಿ ಆಡಳಿತವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಹೈಕೋರ್ಟ್ ಸೂಚನೆ.

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಮಾನ್ಯ ಜಿಲ್ಲಾಧಿಕಾರಿಗಳು ರಚಿಸಿರುವ ಸಲಹಾ ಸಮಿತಿ ಮತ್ತು ಮೇಲ್ವಿಚಾರಣಾ ಸಮಿತಿ ಆದೇಶವನ್ನು ದೇವಸ್ಥಾನದ ಆಡಳಿತ ಮಂಡಳಿಯು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯು ದಿನಾಂಕ 14/12/2020ರಂದು ವಿಚಾರಣೆಗೆ ಬಂದು ಮಾನ್ಯ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಮ್ಮ ತಕರಾರನ್ನು ಸಲ್ಲಿಸಲು ಆದೇಶಿಸಿದೆ. ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಿಂದಿನ ಪರಿಸ್ಥಿತಿಯನ್ನು ಕಾಯ್ದುಕೊಳ್ಳಲು ಆದೇಶಿಸಿದೆ.
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ನೇಮಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಗೆ ಸಂಬಂಧಪಟ್ಟಂತೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ದೇವಸ್ಥಾನಕ್ಕೆ ಜಿಲ್ಲಾಡಳಿತ ರಚಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಚ್ಛನ್ಯಾಯಾಲಯದ ನ್ಯಾಯಮೂರ್ತಿ ದಿನೇಶ್‍ಕುಮಾರ್ ಅವರಿದ್ದ ಏಕಸದಸ್ಯ ಪೀಠ ಸರಕಾರಕ್ಕೆ ಮೇಲಿನ ಸೂಚನೆ ನೀಡಿದೆ.
ದೇವಸ್ಥಾನ ಖಾಸಗಿ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿದೆ. ಇದರಲ್ಲಿ ಸರಕಾರದ ಪಾತ್ರ ಯಾಕೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿದೆ. ಪ್ರಕರಣದಲ್ಲಿ ಆಡಳಿತ ಮಂಡಳಿಯ ಮನವಿ ಪರಿಗಣಿಸಿದ ನ್ಯಾಯಾಲಯ ಧರ್ಮದರ್ಶಿ ರಾಮಪ್ಪ ಅವರ ನೇತೃತ್ವದ ಆಡಳಿತ ಮಂಡಳಿ ದೇವಸ್ಥಾನದ ಆಡಳಿತವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಮೌಕಿಕ ಆದೇಶ ನೀಡಿದೆ. ಈ ಅವಧಿಯಲ್ಲಿ ಸರಕಾರ ದೇವಸ್ಥಾನದ ನಿತ್ಯದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದೆಂದು ತಿಳಿಸಿದೆ.
ಹೈಕೋರ್ಟ್ ಆದೇಶದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಗೆ ಕೊಂಚ ನಿರಾಳ ಸಿಕ್ಕಂತಾಗಿದೆ. ನ್ಯಾಯಾಲಯದ ಆದೇಶದಂತೆ ಸರಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವಿದ್ದು, ಸರಕಾರದ ನಡೆಯ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ.

ವರದಿ: ಸಿಸಿಲ್ ಸೋಮನ್
